Saturday, 2 June 2018

ಜೋಗದ ಸಿರಿ ಬೆಳಕಿನಲ್ಲಿ

ಹಾಡು: ನಿತ್ಯೋತ್ಸವ
ರಚನೆ: ಕೆ. ಎಸ್. ನಿಸ್ಸಾರ್ ಅಹಮದ್
ಗಾಯನ: ಕೆ. ಎಸ್. ನಿಸಾರ್ ಅಹಮದ್


ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆ ಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯಿ, ನಿತ್ಯೋತ್ಸವ ನಿನಗೆ....

ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ.